ಬಿಜೆಪಿ ಸೇರುವ ವದಂತಿ ಸುಳ್ಳು; ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಸ್ಪಷ್ಟನೆ

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಬಿಜೆಪಿಗೆ ಸೇರುತ್ತಾರೆಂಬ ಸುದ್ದಿ ಹರಿದಾಡಿತ್ತು. ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕಣಕ್ಕಿಳಿಯುತ್ತಾರೆ ಎಂಬ ವದಂತಿಯೂ ಹಬ್ಬಿತ್ತು. ಆ ಸುದ್ದಿ ನಿಜವೇ? ನಿಜವಲ್ಲ ಎಂದಾದರೆ ರತ್ನಪ್ರಭಾ ಅವರ ಮುಂದಿನ ನಡೆ ಏನು? ಇಲ್ಲಿದೆ ವಿವರ

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಡಿರುವ ಬೆನ್ನಲ್ಲೇ, ಅವರನ್ನು ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿರುವ ಪ್ರಾಧಿಕಾರವೊಂದಕ್ಕೆ ಅಧ್ಯಕ್ಷರನ್ನಾಗಿ ನೇಮಿಸುವ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದಿದೆ ಎಂಬ ವಿಚಾರ ತಿಳಿದುಬಂದಿದೆ.

೨೦೧೯ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಸಂಸದೀಯ ನಾಯಕ ಎಂ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕಲಬುರಗಿ ಮೀಸಲು ಲೋಕಸಭೆ ಕ್ಷೇತ್ರದಿಂದ ರತ್ನಪ್ರಭಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎಂದು ಕಳೆದ ಎರಡು ದಿನಗಳಿಂದ ವದಂತಿ ಹರಡಿತ್ತು.

ರತ್ನಪ್ರಭಾ ಅವರು ಸೇವೆಯ ಆರಂಭದ ದಿನಗಳಲ್ಲಿ ಹೈದರಾಬಾದ್ ಕರ್ನಾಟಕ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉಪ ವಿಭಾಗಾಧಿಕಾರಿ, ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಆ ಭಾಗದಲ್ಲಿ ಇವರು ತಮ್ಮದೇ ಆದ ವರ್ಚಸ್ಸು ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಕಲಬುರಗಿ ಮೀಸಲು ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ತಯಾರಿ ನಡೆಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಸುದ್ದಿಯನ್ನು ಖುದ್ದು ರತ್ನಪ್ರಭಾ ಅವರೇ ನಿರಾಕರಿಸಿದ್ದಾರೆ. “ಬಿಜೆಪಿಯ ಯಾವ ಮುಖಂಡರೂ ಈ ಕುರಿತು ನನ್ನೊಂದಿಗೆ ಮಾತನಾಡಿಲ್ಲ. ಅಂತಹ ಪ್ರಸ್ತಾವನೆಯೂ ನನ್ನ ಮುಂದಿಲ್ಲ. ಅದೆಲ್ಲ ಸುಳ್ಳು ಸುದ್ದಿ,” ಎಂದು ‘ದಿ ಸ್ಟೇಟ್‌’ಗೆ ಅವರು ಸ್ಪಷ್ಟಪಡಿಸಿದ್ದಾರೆ.

ಈ ಬೆಳವಣಿಗೆ ನಡುವೆಯೇ ರತ್ನಪ್ರಭಾ ಅವರನ್ನು ಕರ್ನಾಟಕ ಕೌಶಲ್ಯಾಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನಾಗಿಸುವ ಪ್ರಸ್ತಾವನೆಯ ಕಡತವು ಸಿಎಂ ಕುಮಾರಸ್ವಾಮಿ ಅವರ ಮುಂದಿದೆ ಎನ್ನಲಾಗಿದೆ. ಈ ಪ್ರಸ್ತಾವನೆಗೆ ಕುಮಾರಸ್ವಾಮಿ ಅವರೂ ಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದೂ ತಿಳಿದುಬಂದಿದೆ. ಇದೇ ಪ್ರಾಧಿಕಾರದಲ್ಲಿ ಹಿಂದಿನ ಮುಖ್ಯ ಕಾರ್ಯದರ್ಶಿ ಸುಭಾಷ್‌ ಚಂದ್ರ ಕುಂಟಿಯಾ ಅವರು ಕಾರ್ಯನಿರ್ವಹಿಸಿದ್ದರು. ಈ ಅಕಾಡೆಮಿಗೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಅಥವಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಐಎಎಸ್‌ ಅಧಿಕಾರಿಗಳಿಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಲು ಅವಕಾಶವಿದೆ.

ಇದನ್ನೂ ಓದಿ : ಜಡ್ಡುಗಟ್ಟಿದ ಸರ್ಕಾರಿ ಆಡಳಿತ; ಇಲಾಖೆಗಳಲ್ಲಿ ಬಾಕಿ ಉಳಿದಿವೆ 1.25 ಲಕ್ಷ ಕಡತ!

ರತ್ನಪ್ರಭಾ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ಬಂಡವಾಳ ಹೂಡಿಕೆ ಸಮಾವೇಶದ ಯಶಸ್ಸಿಗೆ ಕಾರಣರಾಗಿದ್ದರು. ಅಲ್ಲದೆ, ಈ ಅವಧಿಯಲ್ಲಿ ಆರ್ ವಿ ದೇಶಪಾಂಡೆ ಅವರು ಬೃಹತ್‌ ಮತ್ತು ಕೈಗಾರಿಕೆ ಸಚಿವರಾಗಿದ್ದರಲ್ಲದೆ, ಈಗ ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವರೂ ಆಗಿದ್ದಾರೆ. ಹೀಗಾಗಿ, ಇವರನ್ನು ಕರ್ನಾಟಕ ಕೌಶಲ್ಯಾಭಿವೃದ್ಧಿ ಅಕಾಡೆಮಿಗೆ ಅಧ್ಯಕ್ಷರನ್ನಾಗಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇನ್ನು, ರತ್ನಪ್ರಭಾ ಅವರು ಸುಭಾಷ್‌ಚಂದ್ರ ಕುಂಟಿಯಾ ಅವರಿಗಿಂತ ಮೊದಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಬೇಕಿತ್ತು. ಇವರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿಸಲು ಕಾಂಗ್ರೆಸ್‌ ಸಂಸದೀಯ ನಾಯಕ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಒತ್ತಾಸೆಯಾಗಿದ್ದರಲ್ಲದೆ, ಈ ಬಗ್ಗೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದರು ಎಂದು ಹೇಳಲಾಗಿದೆ. ಹೀಗಿರುವಾಗ, ರತ್ನಪ್ರಭಾ ಅವರು ಖರ್ಗೆ ಅವರ ವಿರುದ್ಧ ಕಣಕ್ಕಿಳಿಯುತ್ತಾರೆ ಎನ್ನುವ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More