ಗೌರಿ ಹತ್ಯೆ ಪ್ರಕರಣ: ಬಂಧನ ಭೀತಿ, ನಿರೀಕ್ಷಣಾ ಜಾಮೀನಿಗೆ ನಾಲ್ವರ ಅರ್ಜಿ

ದ.ಕನ್ನಡ ಜಿಲ್ಲೆಯ ಯತಿನ್, ಯತೀಶ್, ಮೋಹನ್, ಕುಮುದಾಕ್ಷ ಎಂಬುವವರನ್ನು ಗೌರಿ ಲಂಕೇಶ್ ಹತ್ಯೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಈ ನಾಲ್ವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ ಸೂಚಿಸಿದ್ದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಇದೇ 27ರಂದು ತನಿಖೆಗೆ ಹಾಜರಾಗಬೇಕು ಎಂದು ಎಸ್ ಐ ಟಿ ಸೂಚಿಸಿತ್ತು. ಆದರೆ, ಬಂಧನ ಭೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಯತಿನ್, ಯತೀಶ್, ಮೋಹನ್, ಕುಮುದಾಕ್ಷ ಎಂಬುವವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಸಂಬಂಧ ಮೂರು ಬಾರಿ ವಿಚಾರಣೆ ನಡೆದಿದ್ದು, ಪಬ್ಲಿಕ್ ಪ್ರಾಸಿಕ್ಯೂಟರ್ ರಾಜು ಪೂಜಾರಿ, “ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದರಿಂದ ನಿರೀಕ್ಷಣಾ ಜಾಮೀನು ನೀಡುವ ವಿಚಾರ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ,” ಎಂದು ಕೋರ್ಟಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಇದನ್ನೂ ಓದಿ : ಎಟಿಎಸ್ ಬಂಧಿತ ಆರೋಪಿಗಳ ಬಳಿ ಪಿಸ್ತೂಲುಗಳು ಪತ್ತೆ; ಗೌರಿ ಹತ್ಯೆಯಲ್ಲಿ ಕೈವಾಡ ಶಂಕೆ

ಅರ್ಜಿದಾರರ ಪರ ವಾದ ಮಂಡಿಸುತ್ತಿರುವ ವಕೀಲ ಎಸ್ ಪಿ ಚಂಗಪ್ಪ, “ಅರ್ಜಿದಾರರು ಯಾವ ಪ್ರದೇಶದಲ್ಲಿ ಬಂಧನಕ್ಕೆ ಒಳಗಾಗುತ್ತಾರೆ ಎಂಬ ಭೀತಿ ಇರುತ್ತದೆಯೋ ಅಲ್ಲಿ ಅರ್ಜಿ ಹಾಕಲು ಅವಕಾಶವಿದೆ. ಅಲ್ಲದೆ, ಕೋಕಾ ಕಾಯ್ದೆ ಅರ್ಜಿದಾರರಿಗೆ ಅನ್ವಯಿಸಲು ಸಾಧ್ಯವಿಲ್ಲ. ಹಳೆಯ ಸೆಕ್ಷನ್ ಪ್ರಕಾರ ಎಸ್ ಐ ಟಿ ಪೊಲೀಸರು ನೋಟಿಸ್ ನೀಡಿದ್ದಾರೆ. ಆರೋಪಿಗಳ ವಿರುದ್ಧವಷ್ಟೇ ಕೋಕಾ ಕಾಯ್ದೆ ಹಾಕಲಾಗಿದೆ. ಅರ್ಜಿದಾರರ ಆರೋಪ ಇನ್ನೂ ಸಾಬೀತಾಗಿಲ್ಲ. ತನಿಖೆ ನಡೆದು ಆರೋಪಿಗಳೆಂದು ಸಾಬೀತಾದ ನಂತರವಷ್ಟೇ ಕೋಕಾ ಕಾಯ್ದೆ ವ್ಯಾಪ್ತಿಗೆ ಅರ್ಜಿದಾರರು ಒಳಪಡಲಿದ್ದಾರೆ,” ಎಂದು ತಿಳಿಸಿದ್ದಾರೆ. ಸೆ.20ಕ್ಕೆ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಪುನಃ ಕೈಗೆತ್ತಿಕೊಳ್ಳಲಿದೆ.

ಗಣಿಗಾರಿಕೆ ಅನುಮತಿಗೆ ಲಂಚ; ಐಎಫ್‌ಎಸ್‌, ಐಎಎಸ್‌ ಅಧಿಕಾರಿಗೆ ಎಸಿಬಿ ಕ್ಲೀನ್‌ಚಿಟ್‌?
ಕಬ್ಬನ್‌ ಪಾರ್ಕ್‌ ಠಾಣೆಗೆ ಶ್ರುತಿ ದೂರು; ಅರ್ಜುನ್ ಸರ್ಜಾ‌ ವಿರುದ್ಧ ಎಫ್‌ಐಆರ್
ಶ್ರೀಲಂಕಾ ರಾಜಕೀಯ ಬಿಕ್ಕಟ್ಟು| ಪಕ್ಸೆ ಮತ್ತೆ ಪ್ರಧಾನಿ, ಭಾರತಕ್ಕೆ ಆಘಾತ
Editor’s Pick More