ಮೋದಿ-ಶಾ ಆಣತಿಯಂತೆ ರಾಜ್ಯಪಾಲ ವಾಲಾ ಕರ್ತವ್ಯ ನಿರ್ವಹಣೆ: ಸಿದ್ದರಾಮಯ್ಯ ಆರೋಪ

ಬಿ ಎಸ್‌ ಯಡಿಯೂರಪ್ಪ ಅವರಿಗೆ ವಿಶ್ವಾಸಮತ ಸಾಬೀತಿಗೆ ಕೇಳಿದ್ದಕ್ಕಿಂತ ಹೆಚ್ಚು ದಿನ ಕಾಲಾವಕಾಶ ನೀಡುವ ಮೂಲಕ ಮೋದಿ-ಶಾ ಆಣತಿಯಂತೆ ರಾಜ್ಯಪಾಲ ವಾಲಾ ನಡೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಅಲ್ಲದೆ, ಸರ್ಕಾರ ಪತನ ಖಂಡಿತ ಎಂದೂ ಹೇಳಿದ್ದಾರೆ

ಕರ್ನಾಟಕ ರಾಜಕಾರಣವು ಕ್ಷಣಕ್ಷಣಕ್ಕೂ ಭಿನ್ನ ರೂಪ ತಳೆಯುತ್ತಿದ್ದು, ಕಾಂಗ್ರೆಸ್‌-ಜೆಡಿಎಸ್‌ ಶಾಸಕರು ಹೈದರಾಬಾದ್‌ನಲ್ಲಿ ಉಳಿದುಕೊಂಡಿದ್ದಾರೆ. ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಗೆ ಸದನದಲ್ಲಿ ಬಹುಮತ ಸಾಬೀತುಪಡಿಸಲು ೧೫ ದಿನ ಕಾಲಾವಕಾಶ ನೀಡಿದ್ದ ರಾಜ್ಯಪಾಲ ವಜುಭಾಯಿ ವಾಲಾ ಅವರ ನಿರ್ಧಾರಕ್ಕೆ ಅಸಮ್ಮತಿ ಸೂಚಿಸಿರುವ ಸುಪ್ರೀಂ ಕೋರ್ಟ್‌ ತ್ರಿಸದಸ್ಯ ಪೀಠವು, ಶನಿವಾರವೇ ವಿಶ್ವಾಸಮತ ಯಾಚಿಸಲು ಯಡಿಯೂರಪ್ಪ ಅವರಿಗೆ ಸೂಚಿಸಿದೆ.

ಸುಪ್ರೀಂ ಕೋರ್ಟ್‌ ನಿರ್ದೇಶನದ ನಂತರ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, "ರಾಜ್ಯಪಾಲ ವಜುಭಾಯಿ ವಾಲಾ ಅವರು ವಿಶ್ವಾಸಮತ ಸಾಬೀತುಪಡಿಸಲು ಯಡಿಯೂರಪ್ಪ ಅವರಿಗೆ ೧೫ ದಿನ ಕಾಲಾವಕಾಶ ನೀಡುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಸೂಚನೆಯಂತೆ ನಡೆದುಕೊಂಡಿದ್ದಾರೆ. ಈ ಮೂಲಕ ಕುದುರೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವುದು ಅವರ ಉದ್ದೇಶ,” ಎಂದು ಆರೋಪಿಸಿದರು.

“ಮೂರು ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿ, ‘ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯಿಂದ ಸಂಖ್ಯಾಬಲವು ೧೧೬ ಆಗಲಿದೆ. ಇಬ್ಬರು ಪಕ್ಷೇತರರೂ ಮೈತ್ರಿಗೆ ಬೆಂಬಲ ನೀಡಿದ್ದಾರೆ. ಸರ್ಕಾರ ರಚಿಸಲು ಅವಕಾಶ ನೀಡಿ’ ರಾಜ್ಯಪಾಲರಿಗೆ ಮನವಿ ಮಾಡಿದ್ದೆವು. ಆದರೆ, ಅವರು ಅದಕ್ಕೆ ಅವಕಾಶ ನೀಡಲಿಲ್ಲ,” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಬಿಜೆಪಿಯ ಅನುಕೂಲಕ್ಕೆ ತಕ್ಕಂತೆ ಸಂವಿಧಾನ ಬದಲಾವಣೆ ಸಾಧ್ಯವಿದೆಯೇ?

“ಮೋದಿ ಮತ್ತು ಅಮಿತ್‌ ಶಾ ಹಿಟ್ಲರ್‌ ಪಳೆಯುಳಿಕೆಗಳು. ಸುಳ್ಳುಗಳನ್ನೇ ಸತ್ಯ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ಮೋದಿ-ಶಾ ಅವರಿಗೆ ಈ ದೇಶದ ಸಂವಿಧಾನದ ಬಗ್ಗೆ ಗೌರವವಿಲ್ಲ. ಇದು ಸಂವಿಧಾನದ ಉಲ್ಲಂಘನೆಯಾಗಿದ್ದು, ಪ್ರಜಾಪ್ರಭುತ್ವ ಕಗ್ಗೊಲೆ ಮಾಡುತ್ತಿದ್ದಾರೆ,” ಎಂದು ಟೀಕಿಸಿದರು.

“ಯಡಿಯೂರಪ್ಪ, ಗಣಿ ಪ್ರಕರಣದ ಆರೋಪಿ ಜನಾರ್ದನ ರೆಡ್ಡಿ, ಶಾಸಕ ಶ್ರೀರಾಮುಲು ಅವರು ಕಾಂಗ್ರೆಸ್‌-ಜೆಡಿಎಸ್‌ ಶಾಸಕರನ್ನು ಸೆಳೆಯಲು ಸಾಕಷ್ಟು ಯತ್ನ ನಡೆಸಿದ್ದಾರೆ. ಇದೆಲ್ಲದರ ಬಗ್ಗೆಯೂ ದಾಖಲೆಗಳಿವೆ. ಅವುಗಳನ್ನು ಸೂಕ್ತ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುವುದು,” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

"ಬಳ್ಳಾರಿ ಜಿಲ್ಲೆಯ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಆನಂದ್‌ ಸಿಂಗ್‌ ಅವರನ್ನು ಅಪಹರಿಸಲಾಗಿದೆ. ಶಾಸಕ ಪ್ರತಾಪ್‌ ಗೌಡ ಪಾಟೀಲ್‌ ಅವರು ಕಾಂಗ್ರೆಸ್‌ ಜೊತೆಯಲ್ಲಿದ್ದಾರೆ.” ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಚಾಣಕ್ಯಪುರಿ | ದೇವೇಗೌಡ ಮತ್ತು ಸಿದ್ದರಾಮಯ್ಯ ಗುರು-ಶಿಷ್ಯರಲ್ಲ!
ಕೋರ್ಟ್‌ ಕದನ ಗೆದ್ದ ತಮಿಳುನಾಡು ಸಿಎಂ ಪಳನಿಸ್ವಾಮಿ ಮುಂದಿರುವ ಸವಾಲುಗಳೇನು?
ದಕ್ಷಿಣದಲ್ಲಿ ಬಿಜೆಪಿಗೆ ಬಾಗಿಲು ಮುಚ್ಚುವ ಗೌಡರ ಹೇಳಿಕೆ ನೆನಪಿಸಿದ ಕಹಿಸತ್ಯ
Editor’s Pick More